ಚಿತ್ರದುರ್ಗ, ನವೆಂಬರ್ 21:
ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ.
ಸೀಬಾರ ಸಮೀಪದ ಗೋಶಾಲೆ ಬಳಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿತ್ತು. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.
ಶಾರ್ಟ್ ಸರ್ಕ್ಯೂಟ್ ಶಂಕೆ
ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಧಗಧಗಿಸಿ ಉರಿಯಲು ಆರಂಭಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಸಂಪೂರ್ಣವಾಗಿ ಭಸ್ಮವಾಗಿತ್ತು.
ಯಾರಿಗೂ ಪ್ರಾಣಾಪಾಯ ಇಲ್ಲ
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ, ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪ್ರಯಾಣಿಕರ ಲಗೇಜ್ ಮಾತ್ರ ಬೆಂಕಿಗೆ ಆಹುತಿಯಾಗಿದೆ.
ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸ್ವಲ್ಪ ಸಮಯ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಕಿಗೆ ನಿಖರ ಕಾರಣ ತಿಳಿಯಲು ತಾಂತ್ರಿಕ ತನಿಖೆ ನಡೆಯುತ್ತಿದೆ.